ಕುಮಟಾ:
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಸಮೀಪ ಮಂಗಳವಾರ ಕಾಲೇಜು ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು ಭಾರೀ ದುರಂತ ತಪ್ಪಿದೆ.
ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದ ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿ ಒಟ್ಟು 50 ವಿದ್ಯಾರ್ಥಿಗಳು ಹಾಗೂ 3 ಮಂದಿ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ 20 ವಿದ್ಯಾರ್ಥಿನಿಯರು ಮತ್ತು 27 ವಿದ್ಯಾರ್ಥಿಗಳು ಸೇರಿದ್ದಾರೆ. ಅಪಘಾತದ ವೇಳೆ 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಡಿಸೆಂಬರ್ 28ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು, ಇಂದು ಬೆಳಿಗ್ಗೆ ಶಿರಸಿಯ ಮಾರಿಕಾಂಬಾ ದೇವಿಯ ದರ್ಶನ ಪಡೆದ ಬಳಿಕ ಯಾಣಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
