ಹಳಿಯಾಳ:
ತಾಲೂಕಿನ ನಾಗಶೆಟ್ಟಿಕೊಪ್ಪ ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಲಘಟಗಿ ರಸ್ತೆಯಲ್ಲಿ ಸೋಮವಾರ ಸಂಜೆ ಸುಮಾರು 7:30ರ ವೇಳೆಗೆ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ.
ಗೋವಾ ಪಾಸಿಂಗ್ ಹೊಂದಿದ್ದ ಎರ್ಟಿಗಾ ಕಾರು ಹಾಗೂ ಕರ್ನಾಟಕ ಪಾಸಿಂಗ್ನ ಗ್ಲಾನ್ಜಾ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಓವರ್ಟೇಕ್ ಮಾಡುವ ವೇಳೆ ಒಂದು ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ವಾಹನಗಳಿಗೆ ಭಾರೀ ಹಾನಿಯಾಗಿದೆ. ಅಪಘಾತದ ಸಂದರ್ಭ ರಸ್ತೆ ಮಧ್ಯೆ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಅದೃಷ್ಟವಶಾತ್, ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವು ನೀಡಿದರು.
ಘಟನೆಯ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
