ಶಿರಸಿ:
ಶಿರಸಿ-ಯಲ್ಲಾಪುರ ರಸ್ತೆಯ ಮಳಲಗಾವ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಸಿದ್ದಾಪುರದಿಂದ ಬೆಳಗಾವಿ ಮದುವೆ ಕಾರ್ಯಕ್ರಮಕ್ಕಾಗಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅತನಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದುವೆಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ತೊಂದರೆ ಆಗದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಕ್ಷಣವೇ ಬದಲಿ ಬಸ್ ವ್ಯವಸ್ಥೆ ಮಾಡಲಾಗಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
