ಕಾರವಾರ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಕಾರವಾರದ ಒಟಿಬಾಗ್ (ಉಳಗಾ) ನಿವಾಸಿ ಪ್ರಸಾದ್ ರಾಜೇಶ್ ಕುಡ್ತರಕರ್ ಎಂದು ಗುರುತಿಸಲಾಗಿದೆ. ರಿಕ್ಷಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಪ್ರಸಾದ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಉನ್ನತ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿತ್ತಾದರೂ, ಜೀವ ಉಳಿಸುವ ಪ್ರಯತ್ನ ಫಲಕಾರಿಯಾಗದೆ ಮಾರ್ಗಮಧ್ಯೆ ಪ್ರಾಣಪಕ್ಷಿ ಹಾರಿಹೋಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
