ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿ ನೇಮಕ; ನೂತನ ಜಿಲ್ಲಾಧಿಕಾರಿಯಾಗಿ ಹರ್ಷಲ್ ಭೋಯರ್
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅಕ್ಟೋಬರ್ 6ರಂದು ಹೊರಡಿಸಿರುವ ಸರ್ಕಾರಿ ಅಧಿಸೂಚನೆಯ ಪ್ರಕಾರ, ಕೆ. ಲಕ್ಷ್ಮಿಪ್ರಿಯಾ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರು ಇನ್ನು ಮುಂದೆ FECC, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ ವಿಭಾಗಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಇದೇ ವೇಳೆ, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಅವರು ಈ ಹಿಂದೆ ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದರೊಂದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಈ ಆಡಳಿತಾತ್ಮಕ ವರ್ಗಾವಣೆ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
