ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಲಾರಿ; ಕ್ಲೀನರ್ಗೆ ಗಾಯ, ಚಾಲಕ ನಾಪತ್ತೆ
ಅಂಕೋಲಾ: ದೀಪಾವಳಿ ಹಬ್ಬದ ದಿನವೇ ಮಾದನಗೇರಿ ಬಳಿ ಲಾರಿ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಆಟೋದಲ್ಲಿ ಯಾರೂ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಅಂಕೋಲಾ ತಾಲೂಕಿನ ಮಾದನಗೇರಿ ಹಿಲ್ಲೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಂಕೋಲಾದಿಂದ ಕುಮಟಾ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಳಕೆಗೆ ಬಾರದ ಸ್ಥಿತಿಗೆ ತಲುಪಿದೆ.
ಘಟನೆಯಲ್ಲಿ ಲಾರಿಯ ಕ್ಲೀನರ್ ಗಾಯಗೊಂಡಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳೀಯರು ಘಟನೆಯ ಮಾಹಿತಿ ಪೊಲೀಸರಿಗೆ ನೀಡಿದ್ದು, ಅಂಕೋಲಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
