ಮದ್ಯ ಮಾರಾಟದ ನಿಯಮಗಳ ಉಲ್ಲಂಘನೆ ಆರೋಪ: ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕರ ಆಕ್ರೋಶ
ದಾಂಡೇಲಿ: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಇಲಾಖೆ ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆಯೇ ಅಥವಾ ಮದ್ಯದಂಗಡಿಗಳ ಮೇಲ್ವಿಚಾರಣೆಗೆ ಮಾತ್ರ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ದಾಂಡೇಲಿಯಲ್ಲಿರುವ ಸುಮಾರು 12 ಬಾರ್ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪಗಳಿದ್ದು, ಸಿ.ಎಲ್.-2 ಮದ್ಯದಂಗಡಿಗಳಲ್ಲಿ ಕುಳಿತು ಮದ್ಯಪಾನಕ್ಕೆ ಅವಕಾಶ ನೀಡುವುದು, ಬಾರ್ಗಳಲ್ಲಿ ಪೆಗ್ ಬದಲು ಕ್ವಾರ್ಟರ್ ಹಾಗೂ ದೊಡ್ಡ ಬಾಟಲಿಗಳ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೆ, ಕೆಲವು ಹೋಟೆಲ್ಗಳು ಹಾಗೂ ಮಾಂಸಾಹಾರಿ ಊಟದ ಹೋಟೆಲ್ಗಳಲ್ಲಿಯೂ ಅಕ್ರಮವಾಗಿ ಮದ್ಯಪಾನಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬ ದೂರುಗಳಿವೆ.
ರೆಸಾರ್ಟ್ ಮಾಲಕರೊಂದಿಗೆ ಗುಪ್ತ ಸಭೆ?
ಇತ್ತೀಚೆಗೆ ಅಬಕಾರಿ ಅಧಿಕಾರಿಗಳು ನಗರದ ರೆಸಾರ್ಟ್ವೊಂದರಲ್ಲಿ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲಕರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಸಭೆಯ ಉದ್ದೇಶವೇನು ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಮಾಧ್ಯಮಗಳಿಗೂ ಮಾಹಿತಿ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಬಕಾರಿ ನಿಯಮಗಳ ಉಲ್ಲಂಘನೆ ನಡೆಯುತ್ತಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಅವರ ಕ್ಷೇತ್ರದಲ್ಲಿಯೇ ಅಬಕಾರಿ ಇಲಾಖೆಯ ಕಾರ್ಯವೈಖರಿ ಕುರಿತು ಇಂತಹ ಆರೋಪಗಳು ಕೇಳಿಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
ಅಬಕಾರಿ ಇಲಾಖೆಯ ಮೇಲಧಿಕಾರಿಗಳು ಈ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಹಾಗೂ ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
