ಕಾರವಾರ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದವರ ಮೇಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಕಳೆದ 10 ದಿನಗಳಿಂದ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 18 ಪ್ರಕರಣಗಳನ್ನು ದಾಖಲಿಸಿ, 94 ಮಂದಿಯನ್ನು ಬಂಧಿಸಲಾಗಿದೆ.
ಹಬ್ಬದ ಸಂಭ್ರಮದ ನಡುವೆ ಸಾರ್ವಜನಿಕ ಸ್ಥಳಗಳಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವ ಬಗ್ಗೆ ನಿಗಾ ವಹಿಸಿದ್ದ ಪೊಲೀಸರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಇಸ್ಪೀಟ್ ಆಟದ ಮೂಲಕ ಹಣದ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪೈಕಿ ಹಳಿಯಾಳ ತಾಲೂಕಿನಲ್ಲಿ ಅತಿ ಹೆಚ್ಚು 8 ಪ್ರಕರಣಗಳು ಪತ್ತೆಯಾಗಿವೆ. ಹೊನ್ನಾವರದಲ್ಲಿ 4, ಕುಮಟಾ ಮತ್ತು ಶಿರಸಿಯಲ್ಲಿ ತಲಾ 2 ಹಾಗೂ ಭಟ್ಕಳ ಮತ್ತು ಸಿದ್ದಾಪುರದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಒಟ್ಟು 94 ಮಂದಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಹಬ್ಬದ ನೆಪದಲ್ಲಿ ಅಕ್ರಮ ಜೂಜಾಟ ನಡೆಸುವುದು ಅಥವಾ ಅದರಲ್ಲಿ ಭಾಗವಹಿಸುವುದು ಕಾನೂನುಬಾಹಿರವಾಗಿದೆ. ಇಂತಹ ಚಟುವಟಿಕೆಗಳು ವ್ಯಕ್ತಿಯ ಆರ್ಥಿಕ ಸ್ಥಿತಿಯ ಜೊತೆಗೆ ಕುಟುಂಬದ ನೆಮ್ಮದಿಯ ಮೇಲೂ ಪರಿಣಾಮ ಬೀರುತ್ತವೆ. ಸಾರ್ವಜನಿಕರು ಜೂಜಾಟದಿಂದ ದೂರವಿದ್ದು, ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಜಿಲ್ಲೆಯ ಯಾವುದೇ ಭಾಗದಲ್ಲಿ ಅಕ್ರಮ ಜೂಜಾಟ ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿರುವ ಇಲಾಖೆ, ಇಂತಹ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದೆ.
