ಕಾರವಾರ: ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಅಂಗಡಿಗೆ ತೆರಳಿದ್ದ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಈ ಘಟನೆ ಮಾಜಾಳಿ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯರು ಚಿತ್ತಾಕುಲ ಪೊಲೀಸ್ ಠಾಣೆಯ ಬಳಿ ಜಮಾಯಿಸಿ ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಸಂಶಾದ್ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಈತ ಕಳೆದ ಒಂದು ವರ್ಷದಿಂದ ವಾಂಗಡದಲ್ಲಿರುವ ಹೇರ್ ಕಟಿಂಗ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಲಕಿ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಅಂಗಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಕುರಿತು ಬಾಲಕಿಯ ಪೋಷಕರು ಚಿತ್ತಾಕುಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಂಶಾದ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇತ್ತ ಬಾಲಕಿಗೆ ಸಂಬಂಧಿಸಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದ್ದು, ಸ್ಥಳೀಯರು ಚಿತ್ತಾಕುಲ ಪೊಲೀಸ್ ಠಾಣೆಯ ಬಳಿ ಸೇರಿ ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
