ಮುಂಡಗೋಡ: ಮನೆಯಲ್ಲಿ ಮಲಗಿದ್ದ ವೃದ್ಧೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಮುಂಡಗೋಡ ಪೊಲೀಸರು ಕೊಲೆ ರಹಸ್ಯವನ್ನು ಭೇದಿಸಿ, ಚಿನ್ನಾಭರಣಕ್ಕಾಗಿ ವೃದ್ಧೆಯನ್ನು ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಆಲಳ್ಳಿ ಗ್ರಾಮದ ಕಮಲವ್ವ ತಿರಕಪ್ಪ ಆಡೂರ (75) ಕೊಲೆಯಾದವರು. ಅ.25ರ ರಾತ್ರಿ ಮನೆಯಲ್ಲಿ ಮಲಗಿದ್ದ ಕಮಲವ್ವ ಅವರು ಮರುದಿನ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ನಡುವೆ ಮನೆಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ತಾಯಿಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪುತ್ರ ರಾಘವೇಂದ್ರ ಆಡೂರ ಪೊಲೀಸರಿಗೆ ದೂರು ನೀಡಿದ್ದರು.
ಆರಂಭದಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಮುಂದುವರಿಸಿದ್ದರು. ಮೃತದೇಹದ ಪರಿಶೀಲನೆ ವೇಳೆ ಯಾವುದೇ ಗಾಯದ ಗುರುತುಗಳು ಕಂಡುಬಂದಿರಲಿಲ್ಲ. ಹೀಗಾಗಿ ಪ್ರಕರಣದ ತನಿಖೆ ಪೊಲೀಸರಿಗೆ ಸವಾಲಾಗಿತ್ತು. ಸಿಸಿಟಿವಿ ದೃಶ್ಯಾವಳಿ ಹಾಗೂ ಕರೆಗಳ ದಾಖಲೆ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳ ನೆರವೂ ಲಭ್ಯವಿರಲಿಲ್ಲ.
ಆದರೂ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸ್ ತಂಡ ನ.13ರಂದು ಸಂಜೆ ಸವಣೂರಿನಲ್ಲಿ ಆಲಳ್ಳಿ ಗ್ರಾಮದ ಮಾರುತಿ ಅಡಿವೆಪ್ಪ ಮುಡಸಾಲಿ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದೆ. ವಿಚಾರಣೆ ವೇಳೆ ಆತ ನೀಡಿದ ಹೇಳಿಕೆಯ ಆಧಾರದಲ್ಲಿ ಕಮಲವ್ವ ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ತೆಗೆದುಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ ಕೃತ್ಯಕ್ಕೆ ಸಂಬಂಧಿಸಿದ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ಮುಂಡಗೋಡ ಠಾಣೆಯ ಇನ್ಸ್ಪೆಕ್ಟರ್ ರಮೇಶ ಹಾನಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಪಿಎಸ್ಐಗಳಾದ ಮಂಜುನಾಥ ಗೌಡರ, ರವೀಂದ್ರ ಬಿರಾದರ, ನಿಂಗರಾಜ ಕರಡಿಗುಡ್ಡಿ ಸೇರಿದಂತೆ ಶಿರಸಿ ಉಪವಿಭಾಗದ ಅಪರಾಧ ವಿಭಾಗ ಹಾಗೂ ಮುಂಡಗೋಡ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸವಾಲಿನ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
