ಹಳಿಯಾಳ:
ಅತಿ ವೇಗದ ಚಾಲನೆಯಿಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ಉರುಳಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕೆಸರೊಳ್ಳಿ ಕ್ರಾಸ್ ಬಳಿ ನಡೆದಿದೆ.
ಬಾಗಲಕೋಟೆಯಿಂದ ದಾಂಡೇಲಿ ವೆಸ್ಟ್ ಕೋಸ್ಟ್ ಪೇಪರ್ ಮಿಲ್ಗೆ ನೀಲಗಿರಿ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಉರುಳಿಬಿದ್ದಿದೆ. ಲಾರಿಯನ್ನು ಅತೀ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದ ಚಾಲಕ, ತಿರುವನ್ನು ಗಮನಿಸದೇ ನಿಯಂತ್ರಣ ಕಳೆದುಕೊಂಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ಪರಿಣಾಮ ಲಾರಿಗೆ ಭಾರೀ ನಷ್ಟ ಉಂಟಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಾರಿ ಚಾಲಕ ಪರಶುರಾಮಪ್ಪ ಅವರಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೇ ತಿರುವಿನಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ, ತಕ್ಷಣವೇ ಸೂಚನಾ ಫಲಕಗಳು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
