ಕಾರವಾರ:
ಜಿಲ್ಲಾ ಕೇಂದ್ರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.
ಧ್ವಜಾರೋಹಣದ ನಂತರ ಸಚಿವರು ಪೊಲೀಸ್, ಅರಣ್ಯ ಇಲಾಖೆ, ಗೃಹ ರಕ್ಷಕ ದಳ ಹಾಗೂ ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ಆಕರ್ಷಕ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಾಮಾನ್ಯ ಜನರು ಮತ್ತು ಬಡವರ ಜೀವನಮಟ್ಟ ಸುಧಾರಿಸುವಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ ಎಂದು ಸಚಿವರು ಶ್ಲಾಘಿಸಿದರು.
ಜಿಲ್ಲೆಯ ಆರು ಮಂದಿ ಶಾಸಕರು ಒಗ್ಗಟ್ಟಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶೈಕ್ಷಣಿಕ ಅಭಿವೃದ್ಧಿಗೆ ಪಣತೊಡಲಾಗಿದೆ. 700 ಕೋಟಿ ರೂ. ಅನುದಾನದಲ್ಲಿ ಪಟ್ಟಣ ಪಂಚಾಯಿತಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 24 ಗಂಟೆ ನಿರಂತರ ನೀರು ಪೂರೈಕೆ ಮಾಡಲಾಗುವುದು. 724 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.
ಜಿಲ್ಲೆಯ ಮೀನುಗಾರರ ಹಿತದೃಷ್ಟಿಯಿಂದ 13 ಬಂದರುಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ, ಸ್ಥಳೀಯರಿಗೆ ಉದ್ಯೋಗ ನೀಡುವ ಉದ್ದೇಶದಿಂದ 13 ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಇಲ್ಲವೆ ಖಾಸಗಿಯವರ ಸಹಕಾರದಲ್ಲಿ ಯೋಜನೆ ಹಮ್ಮಿಕ್ಕೊಳ್ಳಲಾಗಿದೆ.
ಜಿಲ್ಲೆಯ ಜನರ ದಶಕಗಳ ಬೇಡಿಕೆಯಾದ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನಸಾಮಾನ್ಯರ ಧ್ವನಿಗೆ ಸ್ಪಂದಿಸುವ ಕೆಲಸ ನಿರಂತರವಾಗಿ ನಡೆಯಲಿದೆ ಎಂದು ಮಂಕಾಳ ವೈದ್ಯ ಅವರು ಭರವಸೆ ನೀಡಿದರು.
