ಭಟ್ಕಳ:
ಉತ್ತರಕನ್ನಡ ಜಿಲ್ಲೆಯ ಮುರ್ಡೇಶ್ವರ ಪಟ್ಟಣದ ಬೈಲೂರು ಮಾರ್ಗದ ತೆಂಗಾರ್ ಪ್ರದೇಶದ ಬಳಿ ಮನೆಗಳ ಮೇಲೆ ಕಲ್ಲು ತೂರಿದ ಪ್ರಕರಣ ಬೆಳಕಿಗೆ ಬಂದಿದ್ದು, ಅನ್ಯ ಕೋಮಿನ ಆರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಬೈಕ್ನಲ್ಲಿ ಬಂದಿದ್ದ ಆರು ಮಂದಿ ಅಪ್ರಾಪ್ತರು ಕೆಲ ಹಿಂದೂ ಮನೆಗಳ ಮೇಲೆ ಕಲ್ಲು ತೂರಿದರೆಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮುರ್ಡೇಶ್ವರ ಪೊಲೀಸ್ ಸ್ಟೇಷನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ. ಬಂಧಿತರು ಅಪ್ರಾಪ್ತರಾಗಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮುಂದುವರಿದಿದೆ. ಘಟನೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ರಾತ್ರಿ ವೇಳೆ ಮುರ್ಡೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ದೀಪನ್ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ವಾಪಾಸ್ ಪಡೆದರು. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.
