ಕಾರವಾರ/ಭಟ್ಕಳ:
ಬೈಕ್ ಅಪಘಾತದ ಹಿನ್ನೆಲೆ ಎರಡು ಗುಂಪುಗಳ ನಡುವೆ ಉಂಟಾದ ಗಲಾಟೆ ಚಾಕು ಇರಿತದ ಮಟ್ಟಕ್ಕೆ ತಲುಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಜಾಲಿಯ ದೇವಿ ನಗರದಲ್ಲಿ ನಡೆದಿದೆ.
ಗಲಾಟೆಯ ವೇಳೆ ಇಬ್ಬರಿಗೆ ಚಾಕು ಇರಿತವಾಗಿದ್ದು, ಗಾಯಗೊಂಡವರನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರಂಗಿನ ಕಟ್ಟೆಯ ತೌಸಿಪ್ ಕತೀಬ್ (39) ಹಾಗೂ ನಾಗಪ್ಪ ನಾಯ್ಕ ರಸ್ತೆ ನಿವಾಸಿ ಜುಪಾಪ್ ಅರ್ಮರ್ (22) ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಬಳಿಕ ಚಾಕು ಇರಿತ ನಡೆಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿಗಳು ಬ್ಯಾರಿ ಸಮುದಾಯಕ್ಕೆ ಸೇರಿದ ಯುವಕರ ಗುಂಪಾಗಿದ್ದಾರೆ ಎನ್ನಲಾಗಿದೆ.
ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಸ್ಥಳೀಯ ಮುಸ್ಲಿಂ ಸಮುದಾಯದವರು ಜಮಾವಣೆಗೊಂಡಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಸ್ಥಳಕ್ಕೆ ಡಿವೈಎಸ್ಪಿ ಗಿರೀಶ್ ಹಾಗೂ ಸಿಪಿಐ ದಿವಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದೆ.
