
ಕಾರವಾರ:
ಜಿಲ್ಲೆಯ ಕೈಗಾ ಅಣು ಸ್ಥಾವರ ಸೇರಿದಂತೆ ಯಾವುದೇ ಪ್ರದೇಶದಲ್ಲಿ ಸಂಭವಿಸುವ ವಿಪತ್ತುಗಳನ್ನು ಹತೋಟಿಗೆ ತೆಗೆದುಕೊಳ್ಳಲು ಸಂಬಂಧಿಸಿದ ಇಲಾಕೆಯ ಅಧಿಕಾರಿಗಳು ಸಿದ್ದರಾಗಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೈಗಾ ಅಣು ಸ್ಥಾವರ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ವಿವಿಧ ಇಲಾಖೆಗಳ ಕರ್ತವ್ಯಗಳ ಕುರಿತ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.
ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಯಾವುದೇ ಕಾರಣಗಳಿಂದ ತುರ್ತು ಪರಿಸ್ಥಿತಿ ಘೋಷಿಸಿದಲ್ಲಿ ಅಲ್ಲಿನ ಶಾಲೆಗಳು, ಆಸ್ಪತ್ರೆಗಳು, ಜನವಸತಿ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಅವಘಡಗಳು ನಡೆದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಯೋಜನೆಯನ್ನು ಸಿದ್ದಪಡಿಸಿಕೊಂಡಿದ್ದರೆ, ಅನಾಹುತಗಳನ್ನು ಯಶಸ್ವಿಯಾಗಿ ತಪ್ಪಿಸಲು ಸಾಧ್ಯವಾಗಲಿದೆ.
ಜಿಲ್ಲಾಡಳಿತದ ಮೂಲಕ ತುರ್ತು ಸಂದರ್ಭದಲ್ಲಿ ಕೈಗಾ ಅಣು ಸ್ಥಾವರದ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.