ಶಿರಸಿ:
ಶಿರಸಿಯಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಬೆಳಿಗ್ಗೆ 10 ಗಂಟೆಗೆ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳು ಗೈರಾಗಿದ್ದರಿಂದ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ನಿಗದಿತ ಸಮಯಕ್ಕೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಭೀಮಘರ್ಜನೆ ಸಂಘಟನೆಯ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾಯ್ದರೂ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಪ್ರಮುಖರು ಯಾರೂ ಹಾಜರಾಗಲಿಲ್ಲ. ಇದರಿಂದ ಕೋಪಗೊಂಡ ಕಾರ್ಯಕರ್ತರು ಸ್ವತಃ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಿ, ನಂತರ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ, “ಪ್ರತಿ ವರ್ಷವೂ ದಲಿತ ನಾಯಕರಿಗೆ ಈ ರೀತಿಯ ಅವಮಾನ ನಡೆಯುತ್ತಿದೆ. ಇದು ದಲಿತ ವಿರೋಧಿ ಧೋರಣೆ,” ಎಂದು ಆರೋಪಿಸಿದರು. ಹಿರಿಯ ಮುಖಂಡರು ಕೂಡ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದರು. ಕಾರ್ಯಕ್ರಮದ ನಿರ್ಲಕ್ಷ್ಯ ಖಂಡಿಸಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿ ಸ್ಥಳದಿಂದ ಹೊರಟರು.
