ಯಲ್ಲಾಪುರ:
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದರಲ್ಲಿದ್ದ ಚಾಲಕ ಸಜೀವ ದಹನಗೊಂಡ ದುರ್ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ವೋಕ್ಸ್ವೇಗನ್ ಕಂಪನಿಗೆ ಸೇರಿದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾರಿನನ್ನೆಲ್ಲ ಆವರಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ತೀವ್ರತೆಗೆ ಕಾರಿನಲ್ಲಿದ್ದ ಚಾಲಕನು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮೃತದೇಹ ಗುರುತಿಸಲಾಗದ ಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
