ಕಾರವಾರ:
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 30 ಮಧ್ಯಾಹ್ನ 1 ಗಂಟೆಯಿಂದ ಜುಲೈ 2 ಬೆಳಿಗ್ಗೆ 8:30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಅವಧಿಯಲ್ಲಿ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಹಾಗೂ ಮಕ್ಕಳು ನದಿ, ಕೆರೆ, ಸಮುದ್ರ ತೀರ ಹಾಗೂ ನೀರು ತುಂಬಿರುವ ತಗ್ಗು ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಗುಡುಗು, ಸಿಡಿಲು ಹಾಗೂ ಭಾರೀ ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲುವುದು, ವಿದ್ಯುತ್ ಕಂಬಗಳ ಬಳಿ ಓಡಾಡುವುದು ಹಾಗೂ ತುಂಡಾದ ವಿದ್ಯುತ್ ತಂತಿಗಳನ್ನು ಸ್ಪರ್ಶಿಸುವುದನ್ನು ತಪ್ಪಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆ, ಗೋಡೆ ಅಥವಾ ಕಟ್ಟಡಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ಸಂಖ್ಯೆ 08382-229857 ಹಾಗೂ ಮೊಬೈಲ್ ಸಂಖ್ಯೆ 9483511015 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
