ಆರೋಪಿಗಳ ಬಂಧನಕ್ಕೆ ಒತ್ತಾಯ; ಅ.8ರಂದು ಪ್ರತಿಭಟನೆ ಎಚ್ಚರಿಕೆ
ದಾಂಡೇಲಿ: ಜೋಯಿಡಾ ತಾಲೂಕಿನ ಗಣೇಶಗುಡಿಯ ಖಾಸಗಿ ರೆಸಾರ್ಟ್ವೊಂದರಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಎನ್ನಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆ.27ರಂದು ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಸಮಿತಿಯ ಜಿಲ್ಲಾ ಸದಸ್ಯರಾದ ದಾಂಡೇಲಿಯ ರವಿ ಮಾಳಕರಿ ಹಾಗೂ ಮಾರುತಿ ಗವಾಡಿ ಅವರು ರೆಸಾರ್ಟ್ಗೆ ಭೇಟಿ ನೀಡಿ ನೊಂದ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಆರೋಪಿಗಳ ಬಂಧನದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದರೆ, ಅ.8ರಂದು ಪೊಲೀಸ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಆರೋಪಿಗಳು ಪ್ರಭಾವಿಗಳಾಗಿದ್ದರೆ ಅವರ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ನೊಂದ ಮಹಿಳೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
