ಕಾರವಾರ: ಚಿತ್ತಾಕುಲದ ಶಾಖೆಯ ಹಳೇಭಾಗ ಗ್ರಾಮದಲ್ಲಿ ಪದೇಪದೇ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಸೆರೆಹಿಡಿದಿದೆ.
ಅಕ್ಟೋಬರ್ 4ರಂದು ರಾತ್ರಿ 10.30ರ ಸುಮಾರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ವಿಭಾಗ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ಉಪವಿಭಾಗ ಹಾಗೂ ಗೋಪಶಿಟ್ಟಾ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಿರತೆಯ ಚಲನವಲನದ ಮೇಲೆ ನಿರಂತರ ನಿಗಾ ವಹಿಸಿ, ಸೂಕ್ತ ಕಾರ್ಯತಂತ್ರ ರೂಪಿಸಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಚಿರತೆಯನ್ನು ಬೋನಿನಲ್ಲಿ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
ಸೆರೆಹಿಡಿದ ಚಿರತೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಅದು ಆರೋಗ್ಯವಾಗಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಲಾಯಿತು.
ಕಾರ್ಯಾಚರಣೆ ಸಂದರ್ಭದಲ್ಲಿ ಗೋಪಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಸ್ಥಳೀಯ ಗ್ರಾಮಸ್ಥರಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಚಿರತೆಗಳ ಸಂರಕ್ಷಣೆ ಹಾಗೂ ಜನವಸತಿ ಪ್ರದೇಶಗಳಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ಸಾರ್ವಜನಿಕರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಅರಣ್ಯ ಇಲಾಖೆ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಹಾಗೂ ಸ್ಥಳೀಯರ ಸಹಕಾರದಿಂದ ಚಿರತೆಯನ್ನು ಯಾವುದೇ ಅಪಾಯವಿಲ್ಲದೆ ಸೆರೆಹಿಡಿದು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಮೂಲಕ ಹಳೇಭಾಗ ಗ್ರಾಮಸ್ಥರ ಆತಂಕ ನಿವಾರಣೆಯಾಗಿದೆ.
