ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಲ್ಲೇಶ್ವರ ಗ್ರಾಮದಲ್ಲಿ ಅಡಿಕೆ ತೋಟದಲ್ಲಿ ಕಡವೆ ಬೇಟೆಯಾಡುತ್ತಿದ್ದ ಆರೋಪದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದು, ಇನ್ನು ಐವರು ಆರೋಪಿಗಳು ಪರಾರಿಯಾಗಿದ್ದಾರೆ.
ಬಂಧಿತನನ್ನು ನಾರಾಯಣ ಗುರಕ್ಯಾ ಸಿದ್ದಿ (60) ಎಂದು ಗುರುತಿಸಲಾಗಿದೆ. ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ದಾಳಿಯ ಸಂದರ್ಭದಲ್ಲಿ ಕಾಡುಪ್ರಾಣಿ ಬೇಟೆಗೆ ಬಳಸಲಾಗುತ್ತಿದ್ದ ಕತ್ತಿ, ಚಾಕು, ಹೆಡ್ ಟಾರ್ಚ್ ಸೇರಿದಂತೆ ಬೇಟೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಅರಣ್ಯ ಇಲಾಖೆ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮ ಮುಂದುವರಿದಿದೆ.
