ಕಾರವಾರ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
‘ಮತ ಉಳಿಸಿ, ದೇಶ ಉಳಿಸಿ’ ಎಂಬ ಘೋಷಣೆಯೊಂದಿಗೆ ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಬಳಿಕ ಅಲ್ಲಿಯೇ ಧರಣಿ ನಡೆಸಿದ ಕಾರ್ಯಕರ್ತರು ಮತದಾನದ ಹಕ್ಕಿನ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಟಿ. ನಾಯ್ಕ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತ ಚಲಾಯಿಸುವ ಅವಕಾಶ ಕಲ್ಪಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಆದರೆ, ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯು ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಟೀಕಿಸಿದರು.
ನುಸುಳುಕೋರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಉದ್ದೇಶದಿಂದ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ, ಈ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳೇ ಕೈಬಿಡಲ್ಪಡುವ ಆತಂಕ ಎದುರಾಗಿದೆ. ದೇಶದ ಕೋಟ್ಯಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಕಳವಳಕಾರಿ ಸಂಗತಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಯಾವುದೇ ರಾಜಕೀಯ ಪ್ರಭಾವ ಅಥವಾ ತಾರತಮ್ಯಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಡೆಯಬೇಕು. ಒಬ್ಬ ಅರ್ಹ ಮತದಾರನೂ ತನ್ನ ಹಕ್ಕಿನಿಂದ ವಂಚಿತನಾಗಬಾರದು ಎಂದು ಆಗ್ರಹಿಸಿದರು.
ಮತದಾನದ ಹಕ್ಕಿಗೆ ಧಕ್ಕೆಯಾಗುವಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವಿರುದ್ಧವಾಗಿವೆ. ವಿಶೇಷವಾಗಿ ಅಲ್ಪಸಂಖ್ಯಾತರು ಸೇರಿದಂತೆ ಕೆಲವು ಸಮುದಾಯಗಳ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆತಂಕವೂ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಸಮಾನ ಹಕ್ಕುಗಳನ್ನು ಕಾಪಾಡುವುದು ಸರ್ಕಾರ ಹಾಗೂ ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದರು.
SIR ಪ್ರಕ್ರಿಯೆಯಲ್ಲಿನ ಲೋಪದೋಷಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವುದರ ಜತೆಗೆ, ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಕರ್ತವ್ಯಲೋಪ ಎಸಗಿರುವ ಅಥವಾ ಅಕ್ರಮಗಳಿಗೆ ಸಹಕರಿಸಿರುವ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ ಮತದಾರರ ಹಕ್ಕುಗಳಿಗೆ ಸಂಪೂರ್ಣ ರಕ್ಷಣೆ ದೊರೆಯಬೇಕು. ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯಲ್ಲಿ ಬದಲಾವಣೆಗಳಾಗುತ್ತಿವೆ ಎಂಬ ಅನುಮಾನಗಳಿಗೆ ಅವಕಾಶ ನೀಡದೆ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಸತೀಶ ಸೈಲ್, ಕಾಂಗ್ರೆಸ್ ಮುಖಂಡರಾದ ಕೆ. ಶಂಭು ಶೆಟ್ಟಿ, ಅಬ್ಬಾಸ್ ತೊನ್ಸೆ, ವಸಂತ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
