ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ; ಬಿಗಿ ಭದ್ರತೆ, ವೆಬ್ಕಾಸ್ಟಿಂಗ್ ವ್ಯವಸ್ಥೆ
ಕಾರವಾರ: ನ. 15ರಂದು ನಡೆಯಲಿರುವ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ (ಕೆಎಎಸ್) ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷೆಗೆ ಕಾರವಾರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,970 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದರು.
ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 81 ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರಂತೆ 172 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷೆಯು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅವಧಿಗಳಲ್ಲಿ ನಡೆಯಲಿದೆ.
ಪರೀಕ್ಷಾ ಅಕ್ರಮ ತಡೆಗಟ್ಟಲು ಎಲ್ಲ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್ಕಾಸ್ಟಿಂಗ್, ಮೊಬೈಲ್ ಜಾಮರ್ ಹಾಗೂ ಮುಖಚಹರೆ ಗುರುತಿಸುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಬೆಳಿಗ್ಗೆ 9.30ರೊಳಗೆ ಕೇಂದ್ರದಲ್ಲಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ, ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಚುನಾವಣಾ ಮಾದರಿಯ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪ್ರತಿ ಕೇಂದ್ರಕ್ಕೂ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ, ಪೊಲೀಸ್ ಭದ್ರತೆ ಹಾಗೂ ಸಂಚಾರ ನಿಯಂತ್ರಣ ಕೈಗೊಳ್ಳಲಾಗಿದೆ. ದೂರದ ಕೇಂದ್ರಗಳಿಗೆ ತೆರಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.
ಪರೀಕ್ಷೆಗೆ ಸಂಬಂಧಿಸಿದ ವದಂತಿ ಅಥವಾ ದೃಢೀಕರಿಸದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು. ಅಭ್ಯರ್ಥಿಗಳು ಮುಂಚಿತವಾಗಿ ಕೇಂದ್ರಕ್ಕೆ ಆಗಮಿಸಿ, ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.
