ಕಾರವಾರ: ಚಿತ್ತಾಕುಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 10 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಸಂಶಾದ್ನನ್ನು ಪೊಲೀಸರು ಮಹಾರಾಷ್ಟ್ರದ ಮುಂಬೈ ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.
ಸ್ಥಳೀಯ ಅಂಗಡಿಯೊಂದರಲ್ಲಿ ಇಕ್ಬಾಲ್ ಎಂಬವರು ಬಾಡಿಗೆಗೆ ಸಲೂನ್ ನಡೆಸುತ್ತಿದ್ದು, ಇಲ್ಲಿ ಕೆಲಸ ಮಾಡುತ್ತಿದ್ದ ಸಂಶಾದ್ ವಿರುದ್ಧ ಸಲೂನ್ಗೆ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಘಟನೆಯ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಆಕೆಯ ಅಕ್ಕ ಸ್ಥಳಕ್ಕೆ ಧಾವಿಸಿದ್ದಳು. ಬಳಿಕ ತಾಯಿ ಹಾಗೂ ಅಕ್ಕ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿತ್ತು.
ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದ. ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ನಿರಂತರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು ಮುಂಬೈ ಶಿವಾಜಿನಗರದಲ್ಲಿ ಅಡಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧನಕ್ಕೆ ಆಗ್ರಹಿಸಿ ನಡೆದಿತ್ತು ಪ್ರತಿಭಟನೆ
ಬಾಲಕಿ ಮೇಲಿನ ದೌರ್ಜನ್ಯದ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಸಾರ್ವಜನಿಕರು ಚಿತ್ತಾಕುಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
