ಮರಣದ ನಿಖರ ಕಾರಣ ಪತ್ತೆಗೆ ಅರಣ್ಯ ಇಲಾಖೆ ತನಿಖೆ; ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ
ಶಿರಸಿ: ತಾಲೂಕಿನ ಮಳಲಗಾಂವ್ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ಬೆಳಕಿಗೆ ಬಂದಿದೆ. ಆನೆಯ ಸಾವಿಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಘಟನೆ ಅರಣ್ಯ ಇಲಾಖೆಯ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದ್ದು, ಸಾವಿನ ಹಿಂದಿನ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.
ಕಾಡಾನೆಯ ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ತಜ್ಞ ಪಶುವೈದ್ಯರ ತಂಡವೂ ಸ್ಥಳಕ್ಕೆ ಆಗಮಿಸಿ ಭಾನುವಾರ ರಾತ್ರಿಯಿಂದಲೇ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಆರಂಭಿಸಿತು. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಕ್ಕಾಂ ಹೂಡಿ ಅಗತ್ಯ ಪರಿಶೀಲನೆ ಕೈಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪಶುವೈದ್ಯರಿಂದ ಘಟನೆಯ ಕುರಿತು ಮಾಹಿತಿ ಪಡೆದ ಅವರು, ಆನೆಯ ಸಾವಿಗೆ ನಿಖರ ಕಾರಣ ತಿಳಿಯುವ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದರು.
ಆನೆಯ ಸಾವು ಸಹಜವಾಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಸಂಭವಿಸಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
