`ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮೂಲಕ ಪ್ರತಿ ತಾಲೂಕಿಗೂ ಸುಮಾರು 400 ಕೋಟಿ ರೂ ನೆರವು ದೊರೆಯುತ್ತಿದೆ’ ಎಂದು ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.
ಶುಕ್ರವಾರ ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾ ಮಟ್ಟದ 79ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿದ ಅವರು, ವೀರರಾಣಿ ಕಿತ್ತೂರ ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ ಸೇರಿದಂತೆ ಅನೇಕ ಮಹನೀಯರನ್ನು ಸ್ಮರಿಸಿದರು. ಅದಾದ ನಂತರ ತಮ್ಮ ಭಾಷಣದಲ್ಲಿ `ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನವಾಗಿ ಯೋಜನೆಗಳನ್ನು ತಲುಪಿಸುವ ಮೂಲಕ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ನೆರವಾಗಿದೆ’ ಎಂದರು. `ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಾಲೂಕಿನ ಜನತೆಗೆ ಸುಮಾರು ರೂ 400 ಕೋಟಿ ರೂ ನೆರವು ದೊರೆಯುತಿದೆ. ಇದರ ಜೊತೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಹ ಪೂರಕವಾದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ’ ಎಂದರು.
`ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಕಾರ್ಮಿಕರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಕಾರ್ಮಿಕ ಶಾಲೆ ತೆರೆಯುವ ಮೂಲಕ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದoತೆ ನೋಡಿಕೊಳ್ಳಲಾಗುತ್ತದೆ. ವಸತಿ ಶಾಲೆಗಳ ನಿರ್ಮಾಣಕ್ಕೆ ಕೂಡಾ ಆದ್ಯತೆ ಕೊಡಲಾಗಿದೆ. ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪ್ರಥಮಾಧ್ಯತೆ ನೀಡಿದ್ದು ಇದರಲ್ಲಿ ಯಾವುದೇ ಸಮಸ್ಯೆ ತಲೆದೋರದಂತೆ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು’ ಎಂದರು.
ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯುಳ್ಳ ಕಾಫಿ ಟೇಬಲ್ ಬುಕ್ ಬಿಡುಗಡೆ, ಉತ್ತರ ಕನ್ನಡ ಜಿಲ್ಲಾ ಪ್ರವಾಸಿ ತಾಣಗಳ ಕುರಿತು ಅಧಿಕೃತ ವೆಬ್ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ನಗರ ಸಭೆ ಅಧ್ಯಕ್ಷ ರವಿರಾಜ್ ಚಂದ್ರಹಾಸ ಅಂಕೋಲೆಕರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಜಿ ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದೀಲಿಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಶಂಕರ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಇತರರಿದ್ದರು.
