ದಾಂಡೇಲಿ :
ಡಿಸೆಂಬರ್ 13, 14, 15ರಂದು ದಾಂಡೇಲಿಯಲ್ಲಿ ನಡೆಯುತ್ತಿರುವ ಉತ್ತರಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರಕಾರಿ ನೌಕರರಿಗೆ ಭಾಗವಹಿಸಲು ಅನುಕೂಲವಾಗುವಂತೆ ಅನ್ಯ ಕಾರ್ಯನಿಮಿತ್ತ ರಜೆ (ಓಓಡಿ) ಸೌಲಭ್ಯವನ್ನು ಮಂಜೂರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಇರುವ ಸರಕಾರಿ ನೌಕರರು ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮ್ಮೇಳನದಲ್ಲಿ ಭಾಗವಹಿಸಬಹುದು ಹಾಗೂ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಹಾಜರಾತಿ ಪತ್ರವನ್ನು ಮೇಲಾಧಿಕಾರಿಗಳಿಗೆ ನೀಡುವಂತೆ ಆದೇಶಿಸಿ ನಿರ್ದೇಶಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸಹ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೂ ಸಹ ಓಓಡಿ ಆದೇಶ ನೀಡಿರುತ್ತಾರೆ. ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮನವಿ ಮಾಡಿದ್ದಾರೆ.
