ಕಾರವಾರ: ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಡಾ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸುವ ವ್ಯಸನ ಮುಕ್ತ ದಿನಾಚರಣೆ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ನಿರ್ದೇಶನ ನೀಡಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಅವರು, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ್ ಇತರರು ಇದ್ದರು.