
ದಾಂಡೇಲಿ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತವಾಗಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಆಯೋಜಿಸಲಾದ ಭವ್ಯ ಮೆರವಣಿಗೆಯು ವಿಜೃಂಭಣೆಯಿಂದ ಜರುಗಿತು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರವನ್ನೊಳಗೊಂಡ ಭವ್ಯ ಮೆರವಣಿಗೆಯು ಪ್ರಾರಂಭವಾಯಿತು. ಮೆರವಣಿಗೆಯ ಮುನ್ನ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೋಡೆ, ತಹಶೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತ ವಿವೇಕ ಬನ್ನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಐ.ಎಚ್ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ, ಗೌರವ ನಮನಗಳನ್ನು ಸಲ್ಲಿಸಿದರು.
ನಂತರ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಐ.ಹೆಚ್ ಅವರು ಸಂವಿಧಾನ ಪೀಠಿಕೆಯನ್ನು ಓದಿದರು. ಮೆರವಣಿಗೆಗೆ ನಗರಸಭೆಯ ಅಧ್ಯಕ್ಷ ಅಷ್ಪಾಕ್ ಶೇಖ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷ ರಾಜಶೇಖರ ಐ.ಎಚ್ ಅವರು ಚಾಲನೆಯನ್ನು ನೀಡಿದರು.
ಮೆರವಣಿಗೆಯಲ್ಲಿ ನಗರಸಭೆಯ ಸದಸ್ಯರು, ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ದಲಿತಪರ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ನಗರ ಸಭೆಯ ಅಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಡೋಲು ಕುಣಿತ ಎಲ್ಲರ ಗಮನ ಸೆಳೆಯಿತು.